
ಹಿಂದೂ ಸಂಘಟನೆಗಳ ಪ್ರಮುಖರಾದ ಅರುಣ್ ಕುಮಾರ್ ಪುತ್ತಿಲ ವಿರುದ್ಧ ಗಡಿಪಾರು ಆದೇಶ ಜಾರಿಯ ಸಂಬಂಧ, ಕಂದಾಯ ಇಲಾಖೆಯ ಸಹಾಯಕ ಆಯುಕ್ತರು ಜೂನ್ 6ರಂದು ವಿಚಾರಣೆ ನಿಗದಿಪಡಿಸಿದ್ದಾರೆ.
ಪುತ್ತೂರು ತಾಲೂಕಿನ ಮುಂಡೂರು ಗ್ರಾಮದಲ್ಲಿರುವ ಪುತ್ತಿಲ ಮನೆ ನಿವಾಸಿಯಾಗಿರುವ ಅರುಣ್ ಕುಮಾರ್ ಪುತ್ತಿಲ ಅವರನ್ನು ದಕ್ಷಿಣ ಕನ್ನಡ ಜಿಲ್ಲೆಯಿಂದ ಕಲಬುರಗಿ ಜಿಲ್ಲೆಯ ಶಹಬಾದ್ ಪೊಲೀಸ್ ಠಾಣಾ ವ್ಯಾಪ್ತಿಗೆ ಗಡಿಪಾರು ಮಾಡಲು ಸಂಬಂಧಪಟ್ಟ ಅಧಿಕಾರಿಗಳು ಕ್ರಮ ಕೈಗೊಂಡಿದ್ದು, ಈ ಕುರಿತು ವಿಚಾರಣೆ ನಡೆಯಲಿದೆ.
ಈ ವಿಚಾರಣೆಗೆ ಅರುಣ್ ಕುಮಾರ್ ಪುತ್ತಿಲ ಅವರು ಸ್ವತಃ ಅಥವಾ ತಮ್ಮ ನ್ಯಾಯವಾದಿಯ ಮೂಲಕ ಹಾಜರಾಗುವಂತೆ ನೋಟೀಸ್ ಮೂಲಕ ಸೂಚನೆ ನೀಡಲಾಗಿದೆ. ಅವರು ವಿಚಾರಣೆಗೆ ಹಾಜರಾಗದೇ ಇದ್ದರೆ, ಈ ವಿಷಯದಲ್ಲಿ ಅವರೆ ಯಾವುದೇ ಆಸಕ್ತಿ ಇಲ್ಲವೆಂದು ಪರಿಗಣಿಸಿ, ಲಭ್ಯವಿರುವ ಮಾಹಿತಿಯ ಆಧಾರದಲ್ಲಿ ಏಕಪಕ್ಷೀಯ ನಿರ್ಧಾರ ಕೈಗೊಳ್ಳಲಾಗುವುದು ಎಂದು ಸಹಾಯಕ ಆಯುಕ್ತರಾದ ಉಪವಿಭಾಗದ ದಂಡಾಧಿಕಾರಿ ಅವರು ತಿಳಿಸಿದ್ದಾರೆ.
ಇತ್ತೀಚೆಗೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಡೆದ ಕೆಲವು ಕೋಮು ಸಂಘರ್ಷ ಪ್ರಕರಣಗಳ ಹಿನ್ನೆಲೆಯಲ್ಲಿ ಹಿರಿಯ ಐಪಿಎಸ್ ಅಧಿಕಾರಿಗಳ ಬದಲಾವಣೆ ನಡೆಯಿತ್ತು. ಅದರ ಬೆನ್ನಲ್ಲೇ ಈ ಗಡಿಪಾರು ವಿಚಾರಣೆಯ ಬೆಳವಣಿಗೆ ಸಂಭವಿಸಿದೆ.