
ಉಡುಪಿಯಲ್ಲಿ ಐಟಿ-ಬಿಟಿ ಪಾರ್ಕ್ ಸ್ಥಾಪನೆಗೆ ಸರ್ಕಾರದ ಅನುಮೋದನೆ ದೊರಕಿಸುವ ಕುರಿತು ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ ಸಚಿವ ಪ್ರಿಯಾಂಕ್ ಖರ್ಗೆ ಅವರನ್ನು ಉಡುಪಿ ಶಾಸಕ ಯಶ್ ಪಾಲ್ ಸುವರ್ಣ ಭೇಟಿ ಮಾಡಿ ಮನವಿ ಸಲ್ಲಿಸಿದರು.
ಶೈಕ್ಷಣಿಕವಾಗಿ ಪ್ರಮುಖ ಕೇಂದ್ರವಾಗಿ ಗುರುತಿಸಿಕೊಂಡಿರುವ ಉಡುಪಿ, ಪ್ರತಿವರ್ಷ ಸಾವಿರಾರು ಪ್ರತಿಭಾವಂತ ಇಂಜಿನಿಯರಿಂಗ್ ಪದವೀಧರರನ್ನು ದೇಶಕ್ಕೆ ಒದಗಿಸುತ್ತಿದೆ. ಆದರೆ, ಸ್ಥಳೀಯ ಉದ್ಯೋಗಾವಕಾಶಗಳ ಕೊರತೆಯಿಂದ ಈ ವಿದ್ಯಾರ್ಥಿಗಳು ಬೇರೆ ಜಿಲ್ಲೆಗಳು ಅಥವಾ ರಾಜ್ಯಗಳಿಗೆ ವಲಸೆ ಹೋಗುವ ಅನಿವಾರ್ಯತೆಗೆ ಒಳಗಾಗುತ್ತಿದ್ದಾರೆ.
ಭೂ, ಜಲ, ರೈಲ್ವೆ ಮತ್ತು ವಾಯು ಮಾರ್ಗದ ಉತ್ತಮ ಸಂಪರ್ಕ ಹೊಂದಿರುವ ಉಡುಪಿ, ಪ್ರವಾಸೋದ್ಯಮ, ಮೀನುಗಾರಿಕೆ, ಧಾರ್ಮಿಕ ಕೇಂದ್ರ, ಶಿಕ್ಷಣ, ಆರೋಗ್ಯ ಮತ್ತು ಬ್ಯಾಂಕಿಂಗ್ ಕ್ಷೇತ್ರಗಳಲ್ಲಿ ಗಮನಾರ್ಹ ಅಭಿವೃದ್ಧಿಯನ್ನು ಕಂಡುಬಂದಿದೆ. ಈ ಸಮೃದ್ಧ ಪೈಕಟ್ಟನ್ನು ಮತ್ತಷ್ಟು ಬಲಪಡಿಸಲು ಮತ್ತು ಯುವಜನತೆಗೆ ಉದ್ಯೋಗಾವಕಾಶ ಕಲ್ಪಿಸಲು ಐಟಿ-ಬಿಟಿ ಪಾರ್ಕ್ ಪ್ರಮುಖ ಭೂಮಿಕೆಯನ್ನು ವಹಿಸಲಿದೆ.
ಜಿಲ್ಲೆಯ ಆರ್ಥಿಕ ಬೆಳವಣಿಗೆಯ ಜೊತೆಗೆ ಸ್ಥಳೀಯ ಯುವಜನತೆಗೆ ಉದ್ಯೋಗ ಸೃಷ್ಟಿಯಾಗುವಂತೆ, ಸರ್ಕಾರದ ನೇರ ಹಸ್ತಕ್ಷೇಪ ಅಥವಾ ಖಾಸಗಿ ಸಹಭಾಗಿತ್ವದ ಮೂಲಕ ಈ ಯೋಜನೆ ಅನುಷ್ಠಾನಗೊಳ್ಳಬೇಕು ಎಂಬುದು ಶಾಸಕರ ಮನವಿ. ಉಡುಪಿ ಭಾಗದ ಹಿತಾಸಕ್ತಿಗಳನ್ನು ಪರಿಗಣಿಸಿ ಈ ಪ್ರಸ್ತಾವವನ್ನು ಮುಂದಿನ ಹಂತಕ್ಕೆ ತೆಗೆದುಕೊಂಡು ಹೋಗುವಂತೆ ಸಚಿವರಿಗೆ ಮನವಿ ಮಾಡಲಾಗಿದೆ.