
ಕಾಪು: ತುಳುನಾಡಿನ ಪ್ರಖ್ಯಾತ ಏಳು ಜಾತ್ರೆಗಳಲ್ಲಿ ಒಂದಾದ ಕಾಪುವಿನ ಕಾಲಾವಧಿ ಸುಗ್ಗಿ ಮಾರಿಪೂಜೆಯ ಸಿದ್ಧತೆಗಳು ಪೂರ್ಣಗೊಂಡಿವೆ.
ಹಳೇ ಮಾರಿಯಮ್ಮ ದೇವಸ್ಥಾನ, ಹೊಸ ಮಾರಿಗುಡಿ ದೇವಸ್ಥಾನ ಹಾಗೂ ಮೂರನೇ ಮಾರಿಯಮ್ಮ ದೇವಸ್ಥಾನಗಳಲ್ಲಿ ಮಾರ್ಚ್ 25 ಮತ್ತು 26ರಂದು ಮಾರಿಪೂಜೆ ನೆರವೇರಲಿದೆ. ಈ ಮೂರೂ ದೇವಾಲಯಗಳಲ್ಲಿ ಏಕಕಾಲದಲ್ಲಿ ನಡೆಯುವ ಈ ಮಹೋತ್ಸವಕ್ಕೆ ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ, ಕಾಸರಗೋಡು ಜಿಲ್ಲೆಗಳ ಜೊತೆಗೆ ಮುಂಬಯಿ ಮತ್ತು ಘಟ್ಟ ಪ್ರದೇಶಗಳಿಂದಲೂ ಅಪಾರ ಸಂಖ್ಯೆಯಲ್ಲಿ ಭಕ್ತಾದಿಗಳು ಆಗಮಿಸಲಿದ್ದಾರೆ.

ಹೊಸ ಮಾರಿಗುಡಿ ದೇವಸ್ಥಾನದಲ್ಲಿ ವಿಶೇಷ ಸಿದ್ಧತೆ:
ಅಂದಾಜು ₹65 ಕೋಟಿ ವೆಚ್ಚದಲ್ಲಿ ಜೀರ್ಣೋದ್ಧಾರಗೊಂಡ ಹೊಸ ಮಾರಿಗುಡಿ ದೇವಸ್ಥಾನದಲ್ಲಿ ಮೊದಲ ಬಾರಿಗೆ ಸುಗ್ಗಿ ಮಾರಿಪೂಜೆ ಅದ್ಧೂರಿಯಾಗಿ ನಡೆಯಲಿದೆ. ಪ್ರತಿದಿನ ಸಾವಿರಾರು ಭಕ್ತಾದಿಗಳು ಭೇಟಿ ನೀಡುತ್ತಿರುವ ಈ ದೇಗುಲದಲ್ಲಿ, ಸುಗ್ಗಿ ಮಾರಿಪೂಜೆಯ ಸಂದರ್ಭದಲ್ಲಿ ಹೆಚ್ಚಿನ ಭಕ್ತಾದಿಗಳ ಆಗಮನ ನಿರೀಕ್ಷಿಸಲಾಗಿದ್ದು, ಈ ಹಿನ್ನೆಲೆಯಲ್ಲಿ ವಿವಿಧ ಸಿದ್ಧತೆಗಳನ್ನು ಕೈಗೊಳ್ಳಲಾಗಿದೆ ಎಂದು ದೇವಸ್ಥಾನ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ನಡಿಕೆರೆ ರತ್ನಾಕರ ಶೆಟ್ಟಿ, ಕಾರ್ಯನಿರ್ವಹಣಾಧಿಕಾರಿ ರವಿಕಿರಣ್ ಮತ್ತು ಅಭಿವೃದ್ಧಿ ಸಮಿತಿ ಅಧ್ಯಕ್ಷ ಕೆ. ವಾಸುದೇವ ಶೆಟ್ಟಿ ತಿಳಿಸಿದ್ದಾರೆ.