
ಪಡುಬಿದ್ರಿ: ಬಸ್ ಮತ್ತು ರಿಕ್ಷಾ ನಡುವೆ ಸಂಭವಿಸಿದ ಅಪಘಾತ – ಓರ್ವ ಮೃತಪಟ್ಟಿದ್ದು ನಾಲ್ವರು ಗಾಯಗೊಂಡಿದ್ದಾರೆ
ಉಡುಪಿ ಜಿಲ್ಲೆಯ ಪಡುಬಿದ್ರಿ ಸಮೀಪದ ನಂದಿಕೂರು ಅಡ್ವೆ–ಕಾಂಜರಕಟ್ಟೆ ಪ್ರದೇಶದಲ್ಲಿ ಇಂದು ಬೆಳಿಗ್ಗೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಒಬ್ಬರು ಸ್ಥಳದಲ್ಲೇ ಸಾವಿಗೀಡಾಗಿದ್ದು, ನಾಲ್ವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಬೆಳಕಿಗೆ ಬಂದಿದೆ.
ಕಾರ್ಕಳದಿಂದ ಮಂಗಳೂರು ಕಡೆಗೆ ಸಾಗುತ್ತಿದ್ದ ಪದ್ಮಾಂಬಿಕಾ ಬಸ್ಸು, ಅಡ್ವೆ ಗಣಪತಿ ದೇವಸ್ಥಾನ ಸಮೀಪದ ತಿರುವಿನಲ್ಲಿ ಪಕ್ಕದಿಂದ ಬಂದ ರಿಕ್ಷಾವೊಂದು ಅಡ್ಡ ಬಂದ ಪರಿಣಾಮ ಬಸ್ ಅದರ ಮೇಲೆ ಡಿಕ್ಕಿ ಹೊಡೆದು ನಿಯಂತ್ರಣ ತಪ್ಪಿ ರಸ್ತೆಯ ಪಕ್ಕ ನಿಂತಿದೆ. ಬಸ್ಸು ಪಕ್ಕದ ಕಮರಿಗೆ ಬಿದ್ದಿದ್ದರೆ ಬಹುದೊಡ್ಡ ಅನಾಹುತ ಸಂಭವಿಸುವ ಸಾಧ್ಯತೆ ಇತ್ತು ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ.
ರಿಕ್ಷಾದಲ್ಲಿ ಉತ್ತರ ಭಾರತ ಮೂಲದ ಕಾರ್ಮಿಕರು ಪ್ರಯಾಣಿಸುತ್ತಿದ್ದರೆಂದು ತಿಳಿದುಬಂದಿದ್ದು, ಅವರಲ್ಲಿ ಒಬ್ಬರು ಅಪಘಾತದ ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ. ಉಳಿದ ಮೂವರನ್ನು ಪ್ರಾಥಮಿಕ ಚಿಕಿತ್ಸೆಗೆ ಕಾರ್ಕಳ ಆಸ್ಪತ್ರೆಗೆ ಕರೆದೊಯ್ಯಲಾಗಿದ್ದು, ನಂತರ ಹೆಚ್ಚಿನ ಚಿಕಿತ್ಸೆಗೆ ಮಂಗಳೂರಿಗೆ ಸಾಗಿಸಲಾಗಿದೆ.
ಅಪಘಾತದ ಪರಿಣಾಮದಿಂದ ಕೆಲ ಕಾಲ ವಾಹನ ಸಂಚಾರದಲ್ಲಿ ವ್ಯತ್ಯಯ ಉಂಟಾಗಿದ್ದು, ಪರಿಸ್ಥಿತಿಯನ್ನು ನಿಯಂತ್ರಿಸಲು ಪಡುಬಿದ್ರಿ ಪೊಲೀಸರು ಸ್ಥಳಕ್ಕೆ ತ್ವರಿತವಾಗಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಇದೀಗ ಪ್ರಕರಣದ ಕುರಿತು ತನಿಖೆ ಮುಂದುವರಿಯುತ್ತಿದೆ.