
ಬಂಟ್ವಾಳ: ಪತ್ನಿಯನ್ನು ಕೊಂದು ಪತಿ ಆತ್ಮಹತ್ಯೆ ಮಾಡಿಕೊಂಡ ಶಂಕೆ – ಗಂಡ-ಹೆಂಡತಿ ಮೃತದೇಹ ಪತ್ತೆ
ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಬಡಗುಂಡಿ ಎಂಬಲ್ಲಿ ಪತ್ನಿಯನ್ನು ಕೊಂದು ಪತಿ ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆಯ ಹಿನ್ನೆಲೆಯಲ್ಲಿ ಗಂಡ-ಹೆಂಡತಿ ಇಬ್ಬರ ಮೃತದೇಹಗಳು ಗುರುವಾರ ಪತ್ತೆಯಾಗಿದೆ. ಈ ಘಟನೆ ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ಸಜಿಪಮೂಡ ಗ್ರಾಮದ ನಿವಾಸಿಗಳಾದ ತಿಮ್ಮಪ್ಪ ಮೂಲ್ಯ (50) ಹಾಗೂ ಅವರ ಪತ್ನಿ ಜಯಂತಿ (40) ಸಂಶಯಾಸ್ಪದ ರೀತಿಯಲ್ಲಿ ಸಾವನ್ನಪ್ಪಿದ್ದಾರೆ ಎಂದು ಮೂಲಗಳು ತಿಳಿಸಿವೆ. ಜಯಂತಿಯ ಮೃತದೇಹವು ಮನೆಯ ಕೋಣೆಯಲ್ಲಿ ಮಲಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದು, ತಿಮ್ಮಪ್ಪ ಅವರು ಮನೆಯೊಳಗೇ ನೇಣು ಬಿಗಿದುಕೊಂಡ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ.
ಪತ್ನಿಯ ಕುತ್ತಿಗೆ ಹಿಸುಕಿದ ಗುರುತುಗಳು ಕಂಡು ಬಂದಿದ್ದು, ತಿಮ್ಮಪ್ಪ ಅವರು ಜಯಂತಿಯನ್ನು ಕೊಂದು ಬಳಿಕ ಆತ್ಮಹತ್ಯೆ ಮಾಡಿಕೊಂಡಿರಬಹುದೆಂದು ಪೊಲೀಸ್ ಇಲಾಖೆ ಶಂಕೆ ವ್ಯಕ್ತಪಡಿಸಿದೆ.
ತಿಂಗಳು 15 ವರ್ಷಗಳ ಹಿಂದೆ ಮದುವೆಯಾಗಿದ್ದ ದಂಪತಿಗೆ ಇವರೆಗೆ ಮಕ್ಕಳಾಗಿರಲಿಲ್ಲ. ಜಯಂತಿ ಅವರು ಪ್ರಸ್ತುತ ತುಂಬು ಗರ್ಭಿಣಿಯಾಗಿದ್ದು, ಜುಲೈ 2ರಂದು ಸೀಮಂತ ಕಾರ್ಯಕ್ರಮ ನಿಗದಿಯಾಗಿತ್ತು. ಇಂತಹ ಸಮಯದಲ್ಲಿ ಈ ದುರ್ಘಟನೆ ಸಂಭವಿಸಿದ್ದರಿಂದ ಕುಟುಂಬಸ್ಥರು ತೀವ್ರ ದುಃಖಕ್ಕೆ ಗುರಿಯಾಗಿದ್ದಾರೆ.
ಈ ಸಂಬಂಧ ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯ ನಿರೀಕ್ಷಕ ಶಿವಕುಮಾರ್ ಸ್ಥಳಕ್ಕೆ ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರೆಸಿದ್ದಾರೆ.