
ಉಡುಪಿ: ಬ್ರಹ್ಮಾವರ ತಾಲೂಕಿನ ಧರ್ಮವರ ಆಡಿಟೋರಿಯಂ ಬಳಿ ಬುಧವಾರ ಬೆಳಿಗ್ಗೆ ಸಂಭವಿಸಿದ ಅಪಘಾತದಲ್ಲಿ ಶಾಲಾ ಬಸ್ಸಿಗೆ ಲಾರಿ ಹಿಂದಿನಿಂದ ಡಿಕ್ಕಿ ಹೊಡೆದು ವಿದ್ಯಾರ್ಥಿಗಳಿಗೆ ಸಣ್ಣಪುಟ್ಟ ಗಾಯಗಳಾಗಿರುವ ಘಟನೆ ವರದಿಯಾಗಿದೆ.
ಕುಂದಾಪುರದಿಂದ ಬರುವ ಮಾರ್ಗದಲ್ಲಿ ಜಿ.ಎಂ. ವಿದ್ಯಾನಿಕೇತನ ಆಂಗ್ಲಮಾಧ್ಯಮ ಶಾಲೆಯ ಬಸ್ ಧರ್ಮವರ ಸರ್ಕಲ್ ಬಳಿ ಯೂ-ಟರ್ನ್ ಮಾಡುವ ವೇಳೆ ಈ ದುರ್ಘಟನೆ ಸಂಭವಿಸಿದೆ. ಅದೇ ಸಮಯದಲ್ಲಿ ಹಿಂಬದಿಯಿಂದ ವೇಗವಾಗಿ ಬಂದ ಲಾರಿಯೊಂದು ನಿಯಂತ್ರಣ ತಪ್ಪಿ ಬಸ್‌ಗೆ ಡಿಕ್ಕಿ ಹೊಡೆಯಿತು. ಡಿಕ್ಕಿಯ ಪರಿಣಾಮವಾಗಿ ಬಸ್ಸಿನಲ್ಲಿ ಪ್ರಯಾಣಿಸುತ್ತಿದ್ದ ಹಲವು ವಿದ್ಯಾರ್ಥಿಗಳಿಗೆ ಸಣ್ಣ ಪುಟ್ಟ ಗಾಯಗಳಾಗಿದ್ದು, ತಕ್ಷಣವೇ ಅವರನ್ನು ಚಿಕಿತ್ಸೆಗಾಗಿ ಬ್ರಹ್ಮಾವರದ ಖಾಸಗಿ ಆಸ್ಪತ್ರೆಗೆ ಸಾಗಿಸಲಾಯಿತು.
ಬದಲಿ ವಾಹನ ವ್ಯವಸ್ಥೆ ಮಾಡಿ ಉಳಿದ ವಿದ್ಯಾರ್ಥಿಗಳನ್ನು ಶಾಲೆಗೆ ಕಳುಹಿಸಲಾಯಿತು. ಘಟನೆಯಿಂದ ವಿದ್ಯಾರ್ಥಿಗಳಲ್ಲಿ ಭೀತಿಯ ವಾತಾವರಣ ಉಂಟಾಗಿ ಕೆಲ ಕಾಲ ಗೊಂದಲದ ಸ್ಥಿತಿ ನಿರ್ಮಾಣವಾಯಿತು.
ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಈ ಅಪಘಾತಕ್ಕೆ ಬಸ್ ಚಾಲಕನ ನಿರ್ಲಕ್ಷವೇ ಪ್ರಮುಖ ಕಾರಣವೆಂದು ಪ್ರಾಥಮಿಕ ತನಿಖೆಯಲ್ಲಿ ತಿಳಿದುಬಂದಿದೆ. ಬ್ರಹ್ಮಾವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರಿಸಲಾಗಿದೆ.